ಬೆಂಗಳೂರು, ಮಾರ್ಚ್.02: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಘಟನೆ ನಡೆದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಸ್ಫೋಟ ಸಂಭವಿಸಿದ್ದು ಪ್ರಕರಣದ ಸುತ್ತ ಅನುಮಾನದ ಹುತ್ತ ಬೆಳೆದಿದೆ.
ಸದ್ಯ ಈ ಘಟನೆ ಸಂಬಂಧ ಸ್ಫೋಟಕ ಮಾಹಿತಿಯೊಂದು ಹೊರ ಬಿದ್ದಿದೆ. ರಾಜ್ಯದಲ್ಲಿ ಈ ಹಿಂದೆ ನಡೆದಿದ್ದ ಸ್ಫೋಟಗಳಿಗೂ ಈಗಿನ ಸ್ಫೋಟಕ್ಕೂ ಸಾಮ್ಯತೆ ಇದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಈ ಹಿಂದೆ ನಡೆದಿರುವ ಸ್ಫೋಟಗಳು ಹಾಗೂ ರಾಮೇಶ್ವರಂ ಕೆಫೆ ಸ್ಫೋಟ ನಡುವಿನ ಸಾಮ್ಯತೆ ಬಗ್ಗೆ ಪರಿಶೀಲನೆ ನಡೆಸಿದ್ದು ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇದೆ ಎಂಬ ಅಂಶವನ್ನು ಪತ್ತೆ ಹಚ್ಚಿದ್ದಾರೆ.
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಳಸಿದ್ದ ಸ್ಫೋಟಕ ಸಾಮಗ್ರಿಯನ್ನೇ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಬಳಕೆ ಮಾಡಲಾಗಿದೆ.
ಎರಡೂ ಕಡೆ ನಡೆದ ಸ್ಫೋಟದ ವೇಳೆ ಹೊರಸೂಸಿರುವ ಹೊಗೆ ಒಂದೇ ಮಾದರಿಯಲ್ಲಿದೆ. ಈ ಎರಡೂ ಸ್ಫೋಟಗಳಲ್ಲೂ ಒಂದೇ ಮಾದರಿಯ ವಸ್ತುಗಳ ಬಳಕೆ ಮಾಡಲಾಗಿದೆ. ಎರಡೂ ಕಡೆ ಬ್ಯಾಟರಿ, ಡಿಟೊನೇಟರ್ಗಳು, ನಟ್ಟು, ಬೋಲ್ಟ್ ಬಳಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತಷ್ಟು ಚುರುಕಾಗಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಕ್ ಮತ್ತು ಸಹಚರರನ್ನು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಶಾರಿಕ್ ಇಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲ್ ನಲ್ಲಿದ್ದಾರೆ.