ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಕರಣ ರಾಜಕೀಯ ಪ್ರೇರಿತ ಅಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.
ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.
ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.