ಚಿತ್ರದುರ್ಗ ಮಾ. 31 : ಭದ್ರಾ ಮೇಲ್ದಂಡೆಗೆ ಅನುದಾನ ಘೋಷಿಸಿ ಈವರೆಗೆ ಕೊಟ್ಟಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಆದರೂ ಕೇಂದ್ರ ಸ್ಪಂದಿಸಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರೆಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಸತತವಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ.
ಭದ್ರಾಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಬರ ಪರಿಹಾರ ಕೂಡ ನೀಡಿಲ್ಲ. ಜಿಲ್ಲೆಗೆ ಅನ್ಯಾಯ ಆಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಚ್ಚು ಸ್ಥಾನ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಜನರು ಸಹ ಇದನ್ನು ಅರ್ಥಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದ ಸಚಿವರು, ಲೋಕಸಭಾ ಕ್ಷೇತ್ರ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲಿದ್ದು ಅದೇ ದಿನ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಭಾಗವಹಿಸಲಿದ್ದಾರೆ ಎಂದರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ ಚಿತ್ರದುರ್ಗ ಕಾಂಗ್ರೆಸ್ ಭದ್ರಕೋಟೆ. ಮತದಾರರು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಪ್ಪಿದ್ದಾರೆ. ಜನ ಕಲ್ಯಾಣಕ್ಕಾಗಿ ರೂಪಿಸಿದ ಐದು ಗ್ಯಾರೆಂಟಿ ಅನುಷ್ಠಾನ ಮಾಡಿ ಜನರ ನಂಬಿಕೆ ಉಳಿಸಿಕೊಂಡಿದ್ದೇವೆ. ಈ ಚುನಾವಣೆಯಲ್ಲೂ ಜನ ಕೈ ಹಿಡಿಯುವ ವಿಶ್ವಾಸ ಇದೆ. 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಾತಾವರಣ ಇದೆ. ಭದ್ರಾ ಮೇಲ್ದಂಡೆಗೆ ಅನುದಾನ ಘೋಷಿಸಿ ಈವರೆಗೆ ಕೊಟ್ಟಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲ ಇದೆ. ಆದರೂ ಕೇಂದ್ರ ಸ್ಪಂದಿಸಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಗ್ಯಾರೆಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದು ಹೇಳಿದ ಅವರು ನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿ ನಂತರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬಹಿರಂಗ ಸಭೆ ನಡೆಯಲಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮಾತನಾಡಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ ಘೋಷಿಸಿದ್ದರು. ಕಾಯ್ದೆ ಪ್ರಕಾರ 12 ಸಾವಿರ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚಿದ್ದರೆ ಅದನ್ನು ರಾಷ್ಟ್ರೀಯ ಯೋಜನೆ ಆಗಬೇಕು ಆದರೂ ಮಾಡಿಲ್ಲ. ಅನುದಾನವನ್ನೂ ಕೊಟ್ಟಿಲ್ಲ. ಡಬಲ್ ಇಂಜಿನ್ ಸರ್ಕಾರ ಕೇಳಿಲ್ಲ. ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸಿದ್ದರಾಮಯ್ಯ 500 ಕೋಟಿ ಕೊಟ್ಟಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಜಿಲ್ಲೆಗೆ ಯಾವ ಕೊಡುಗೆ ನೀಡಿದೆ ಎಂದು ಪ್ರಶ್ನಿಸಿದ ಅವರು, ನಾನು ಮೂಡಿಗೆರೆಯಲ್ಲಿ ಸ್ಪರ್ಧೆ ಮಾಡಿದ್ದೆ ಅಷ್ಟೇ, ಮೂಡಿಗೆರೆ ಚಂದ್ರಪ್ಪ ಅಲ್ಲ .ಹೊಸದುರ್ಗದ ಪಕ್ಕದಲ್ಲೇ ಇರುವ ತರೀಕೆರೆ ತಾಲೂಕಿನವನು. ನಾನೇನು 500 ಕಿ.ಮೀ ದೂರದಿಂದ ಬಂದಿಲ್ಲ. ಕಳೆದ ಚುನಾವಣೆಯಲ್ಲಿ ಸೋತರೂ ಪಲಾಯನ ಮಾಡದೆ ಜನ ಸಂಪರ್ಕದಲ್ಲಿದ್ದೆ. ಈ ಸಾರಿ ಜನರು ಕೈ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದರು.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಮಾತನಾಡಿ, ಬರಕ್ಕೆ ಸಂಬಂದಿಸಿದಂತೆ ಕೇಂದ್ರದಿಂದ ಬಾರೀ ಅನ್ಯಾಯ ಆಗುತ್ತಿದೆ. ನಮಗೆ ಬರಬೇಕಾದ ತೆರಿಗೆಯೂ ಬರುತ್ತಿಲ್ಲ. ರಾಜ್ಯ ಸರ್ಕಾರವೇ ದೆಹಲಿಗೆ ಹೋಗಿ ಪ್ರತಿಭಟಿಸಿದ್ದೇವೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದರು.
ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಜಿಲ್ಲೆಯ ಶಾಸಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ಇದರಿಂದ ರಾಜ್ಯ ಸರ್ಕಾರದ ಐದು ಗ್ಯಾರೆಂಟಿಗಳ ಜೊತೆಗೆ ಕೇಂದ್ರ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಸಿಗಲಿದೆ ಎಂದರು.
ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮುಖಂಡರಾದ ಹಾಲಸ್ವಾಮಿ, ಶಿವಣ್ಣ, ಮರುಳಾರಾಧ್ಯ, ಅಲ್ಲಾಭಕ್ಷಿ, ಡಿ.ಟಿ.ವೆಂಕಟೇಶ್, ನರಸಿಂಹರಾಜು, ಎನ್.ಡಿ.ಕುಮಾರ್, ಸಂಪತ್ ಕುಮಾರ್, ನರಸಿಂಹರಾಜು, ಬಾಲಕೃಷ್ಣ ಯಾದವ್, ಪ್ರಕಾಶ್ ರಾಮನಾಯ್ಕ್, ಅಲ್ಲಾಭಕ್ಷಿ, ಜಯ್ಯಣ್ಣ, ಶಿವಣ್ಣ, ವೆಂಕಟೇಶ್, ಮಧುಗೌಡ, ರವಿ ಲೋಕೇಶ್, ಕುಮಾರ್, ಜಗದೀಶ್, ಮತ್ತಿತರರಿದ್ದರು.