ಚಿತ್ರದುರ್ಗ, ಏಪ್ರಿಲ್.15 : ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸದೆ ಅವಮಾನ ಮಾಡಿರುವ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಂಜನಾಯ್ಕನ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತೇಕಲವಟ್ಟಿ ಗ್ರಾಮಸ್ಥರು ಹಾಗೂ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಗ್ರಾಮ ಪಂಚಾಯಿತಿ ಪಿಡಿಓ. ಮಂಜನಾಯ್ಕನ ವಿರುದ್ದ ಧಿಕ್ಕಾರಗಳನ್ನು ಕೂಗಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಯರ್ರಿಸ್ವಾಮಿ, ತೇಕಲವಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.