ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆಯೇ ಆಗಬೇಕು. ನೇಹಾ ಸಾವಿಗೆ ಸರ್ಕಾರದಿಂದ ನ್ಯಾಯ ಸಿಗಬೇಕು ಎಂದು ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಈ ಬೆಳವಣಿಗೆಯ ಮಧ್ಯೆ ಸಿಎಂ ಸಿದ್ದರಾಮಯ್ಯ ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಗೆ ವಹಿಸುತ್ತೇವೆ ಎಂದಿದ್ದಾರೆ.
ನೇಹಾ ಹಿರೇಮಠ ಹತ್ಯೆ ಖಂಡಿಸಿ ಇವತ್ತು ಹುಬ್ಬಳ್ಳಿ-ಧಾರವಾಡ ನಗರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಅಂಜುಮನ್ ಸಂಸ್ಥೆಯಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಹುಬ್ಬಳ್ಳಿ ಶಾಹಾಬಜಾರ ಸೇರಿ ಪ್ರಮುಖ ಮಾರ್ಕೆಟ್‌ಗಳನ್ನು ಬಂದ್ ಮಾಡಲಾಗಿದೆ. ಮುಸ್ಲಿಂ ವ್ಯಾಪಾರಿಗಳಿಂದ ಜಸ್ಟೀಸ್ ಟು ನೇಹಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಾಗಿದೆ. ಹುಬ್ಬಳ್ಳಿ-ಧಾರವಾಡದ ಅವಳಿ ನಗರದಲ್ಲಿ ಇಂದು ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ. ಧಾರವಾಡದ ಅಂಜುಮನ್ ಸಂಸ್ಥೆಯಿಂದ ಧಾರವಾಡದ ಡಿಸಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಲಾಗಿದೆ.
ನೇಹಾ ಹತ್ಯೆ ಪ್ರಕರಣವನ್ನು ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ ನಡೆಸಲಾಗಿದೆ. ಇಂತಹ ಘಟನೆಗಳು ಪುನಃ ಮರುಕಳಿಸಬಾರದು. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು, ಕಾರ್ಯಕರ್ತರು, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಲ್ಲಿ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯೆದುರು ನೇಹಾ ಹತ್ಯೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಶಾಸಕ ದಿನಕರ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಕಲಬುರಗಿಯಲ್ಲೂ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗಿದ್ದು, ಟೈಯರ್‌ಗೆ ಬೆಂಕಿ ಹಚ್ಚಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಬಾಗಲಕೋಟೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಮಾಜಿ ಸಚಿವ ಮುರುಗೇಶ ನಿರಾಣಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ನೇಹಾ ಕೊಲೆ ಹಿನ್ನೆಲೆ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಚಿಕ್ಕೋಡಿಯಲ್ಲೂ ಬಿಜೆಪಿ, ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕೆ.ಸಿ ರಸ್ತೆಯಿಂದ ಬಸವೇಶ್ವರ ವೃತ್ತದವರೆಗೂ ಸಾವಿರಾರು ಜನ ಧರಣಿ ನಡೆಸಿದ್ದು, ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಲಾಗಿದೆ.