ಧಾರವಾಡ ಮೇ.16: ರಾಜ್ಯ ಸರಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ಹಣ ಹೊಂದಾಣಿಕೆ ಮಾಡದಿರುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್‍ಗಳಿಗೆ ತಿಳಿಸಲಾಗಿದೆ. ಆದಾಗ್ಯೂ ಕುಂದಗೋಳ, ನವಲಗುಂದ ಸೇರಿ ಕೆಲವು ಕಡೆ ಬ್ಯಾಂಕಗಳು ಪರಿಹಾರ ಹಣವನ್ನು ರೈತರ ಸಾಲಕ್ಕೆ ಹೊಂದಿಸುತ್ತಿರುವ ಕುರಿತು ದೂರು, ವರದಿಗಳು ಬರುತ್ತಿವೆ. ಈ ವಿಷಯದಲ್ಲಿ ಸರಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ಬ್ಯಾಂಕರ್ಸ ಪ್ರಗತಿ ಪರಿಶೀಲನಾ ಸಮಿತಿಯ ಸಹ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024 ರ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರಕಾರ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪಡೀತ ತಾಲೂಕುಗಳೆಂದು ಘೋಷಣೆ ಮಾಡಿ, ಸರಕಾರದ ನಿಯಮಾವಳಿಗಳ ಪರಿಹಾರ ಹಣ, ಇತರ ಸೌಲಭ್ಯಗಳನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಈಗ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿರುವದರಿಂದ ರೈತರು ಭೂಮಿ ಉಳುಮೆ ಮಾಡಿ ಬಿತ್ತನೆಗೆ ಸಿದ್ದಗೊಳಿಸಬೇಕು, ಬೀಜ, ಗೊಬ್ಬರ ಖರೀದಿಸಬೇಕು. ಅವರ ನೆರವಿಗಾಗಿ ರಾಜ್ಯ ಸರಕಾರವು ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ನೇರವಾಗಿ ಬರಪರಿಹಾರ ಜಮೆ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.