ಶಿವಮೊಗ್ಗ: ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬೆಂಬಲ ಸೂಚಿಸಿದ್ದಾರೆ.
ಸೋಮವಾರ ಶಿವಮೊಗ್ಗದಲ್ಲಿ ರಘುಪತಿ ಭಟ್ ಅವರ ಪದವೀಧರ ಸಂಪರ್ಕ ಕೇಂದ್ರವನ್ನು ಈಶ್ವರಪ್ಪ ಉದ್ಘಾಟಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಮುಖಂಡರು ಕೂಡ ರಘುಪತಿ ಭಟ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ರಘುಪತಿ ಭಟ್ ಮಾತನಾಡಿ, ಮೂರು ಬಾರಿ ಶಾಸಕನಾಗಿದ್ದೆ. ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದೆ. ವರಿಷ್ಠರು ಸ್ಪರ್ಧೆಗೆ ಅವಕಾಶ ನೀಡುವುದಾಗಿ ಹೇಳಿದ್ದರು.
ಪರಿಷತ್ ಚುನಾವಣೆಯಲ್ಲಿ ಕರಾವಳಿ ಹಾಗೂ ಮಲೆನಾಡಿನವರಿಗೆ ತಲಾ ಒಂದೊಂದು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡುವ ಸಂಪ್ರದಾಯ ಬಿಜೆಪಿಯಲ್ಲಿ ಇತ್ತು. ಈ ಬಾರಿ ಸಂಪ್ರದಾಯ ಮುರಿಯಲಾಗಿದೆ. ನಾನು ಮೊದಲೇ ಹೇಳಿದಂತೆ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ತಿಳಿಸಿದ್ದಾರೆ.