Breaking
Wed. Dec 25th, 2024

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ….!

ಚಿತ್ರದುರ್ಗ : ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಕಾರ್ಯಾಗಾರ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಕೃಷಿಯಾಧಾರಿತ ಜಿಲ್ಲೆಯಾಗಿದ್ದು, ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಹೆಕ್ಟೇರ್‍ನಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಗುರಿ ಹೊಂದಲಾಗಿದೆ. ಹಾಗಾಗಿ ಮುಖ್ಯವಾಗಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆ, ಕೃಷಿ ಚಟುವಟಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಕೆ, ಹೊಸ ತಳಿ ಹಾಗೂ ಹೆಚ್ಚಿನ ಇಳುವರಿಯ ಬಿತ್ತನೆ ಬೀಜಗಳ ಪರಿಚಯವನ್ನು ನಿಗಧಿತ ಸಮಯದಲ್ಲಿ, ನಿರ್ಧಿಷ್ಟ ಅವಧಿಯಲ್ಲಿ ರೈತರಿಗೆ ಅಗತ್ಯ ಮಾಹಿತಿ ತಲುಪಿಸುವ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರಗಳು ನಿಗಧಿತ ಸಮಯಕ್ಕೆ ದೊರೆಯುವಂತಾಗಬೇಕು ಎಂದರು.
ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ಪ್ರಮಾಣವನ್ನು ದಾಸ್ತಾನು ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ಬೀಜ ಸರಬರಾಜು ಆಗದಂತೆ ಕ್ರಮವಹಿಸುವ ಮೂಲಕ ಅದರ ಗುಣಮಟ್ಟವನ್ನು ಪರಿಶೀಲನೆ ನಡೆಸಿ, ನಿಗಧಿತ ಅವಧಿಯಲ್ಲಿ ಪೂರೈಕೆ ಮಾಡಬೇಕು. ಮುಂಗಾರು ಪೂರ್ವ ಸಿದ್ಧತೆಯ ಈ ಹಂತದಲ್ಲಿ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಸಲಹೆ ಸೂಚನೆಗಳನ್ನು ನೀಡುವುದು ಕೃಷಿ ಇಲಾಖೆ ಅಧಿಕಾರಿಗಳ ಕರ್ತವ್ಯವೂ ಹೌದು ಎಂದು ತಿಳಿಸಿದರು.
ಜಿಲ್ಲೆಯ ಕೃಷಿ ಪರಿಕರಗಳ ಮಾರಾಟಗಾರರು ಬಿತ್ತನೆ, ರಸಗೊಬ್ಬರವನ್ನು ನಿಗಧಿತ ದರಕ್ಕೆ ಸರಿಯಾಗಿ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದ ಅವರು, ರೈತ ಸಂಪರ್ಕ ಕೇಂದ್ರಗಳು ಹಾಗೂ ಇಲಾಖೆ ಅಧಿಕಾರಿಗಳು ಕೃಷಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ರೈತರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ರೈತ ಸಂಪರ್ಕ ಕೇಂದ್ರಗಳು 24*7 ಕಾರ್ಯನಿರ್ವಹಿಸುವ ಮೂಲಕ ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ: ಬೆಳೆವಿಮೆ ಹಾಗೂ ಬೆಳೆ ನಷ್ಟ ಪರಿಹಾರ ಪಾವತಿಗೆ ಸಂಬಂಧಪಟ್ಟಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಆಯಾ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ದೂರುಗಳನ್ನು ಸ್ವೀಕೃತಿ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು, ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದು, ಬೆಳೆವಿಮೆ ಹಾಗೂ ಬೆಳೆನಷ್ಟ ಪಾವತಿ ಸಂಬಂಧ ಹಾಗೂ ರೈತರ ಸಮಸ್ಯೆಗಳಿಗೆ ಸರಿಯಾದ ಮಾಹಿತಿ ನೀಡದೇ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಪಿಂಚಣಿ, ಬೆಳೆ ಪರಿಹಾರದ ಹಣವನ್ನು ಬ್ಯಾಂಕ್‍ಗಳು ಸಾಲಕ್ಕೆ ಕಡಿತ ಮಾಡಿಕೊಳ್ಳುವಂತಿಲ್ಲ: ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಯ ಹಣ, ಬೆಳೆವಿಮೆ ಹಾಗೂ ಬೆಳೆನಷ್ಟ ಪರಿಹಾರ ಸೇರಿದಂತೆ ಸರ್ಕಾರದ ವಿವಿಧ ಯೋಜನೆಯ ಮೊತ್ತವನ್ನು ಬ್ಯಾಂಕ್‍ಗಳು ಯಾವುದೇ ಕಾರಣಕ್ಕೂ ಕಡ್ಡಾಯವಾಗಿ ರೈತರ ಇತರೆ ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸರ್ಕಾರದ ನಿರ್ದೇಶನ ಹಾಗೂ ಜಿಲ್ಲಾಡಳಿತದಿಂದಲೂ ಈಗಾಗಲೇ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಬ್ಯಾಂಕ್‍ಗಳಿಗೆ ನಿರ್ದೇಶನ ನೀಡಲಾಗಿದ್ದು, ಬೆಳೆಪರಿಹಾರ, ಪಿಂಚಣಿ ಹಣವನ್ನು ರೈತರ ಸಾಲದ ಖಾತೆಗಳಿಗೆ ಯಾವುದೇ ಕಾರಣಕ್ಕೂ ಜಮೆ ಮಾಡಿಕೊಳ್ಳಬಾರದು. ಒಂದು ವೇಳೆ ತಾಂತ್ರಿಕ ಕಾರಣದಿಂದ ಸಾಲದ ಖಾತೆಗೆ ಜಮೆಯಾಗಿದ್ದರೆ, ಕಡ್ಡಾಯವಾಗಿ ಮರು ಪಾವತಿ ಮಾಡಬೇಕು. ಮರು ಪಾವತಿ ಮಾಡದೇ ಇರುವ ಬ್ಯಾಂಕ್‍ಗಳ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಳೆದ ಬಾರಿ ಕೈಗೊಂಡಿರುವ ಬೆಳೆ ಸಮೀಕ್ಷೆ ಪ್ರಯೋಗಗಳ ವ್ಯಾತ್ಯಾಸದಿಂದಾಗಿ ಸುಮಾರು ರೈತರಿಗೆ ಬೆಳೆವಿಮೆ ಪಾವತಿಯಾಗಿಲ್ಲ. ಹಾಗಾಗಿ ಮರು ಬೆಳೆ ಸಮೀಕ್ಷೆ ಪ್ರಯೋಗ ನಡೆಸಿ ಬೆಳೆವಿಮೆ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಪ್ರಯೋಗಗಳ ಸಂದರ್ಭದಲ್ಲಿ ಇಂತಹ ವ್ಯತ್ಯಾಸಗಳು ಆಗಬಾರದು. ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಪ್ರಯೋಗ ಕೈಗೊಳ್ಳುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾರ್ಯಾಗಾರ ಹಮ್ಮಿಕೊಂಡು, ಬೆಳೆ ಸಮೀಕ್ಷೆ ಪ್ರಯೋಗಗಳ ಕುರಿತು ಮಾಹಿತಿ ನೀಡಲಾಗುವುದು.
ಬೆಳೆ ಸಮೀಕ್ಷೆ ಪ್ರಯೋಗಗಳನ್ನು ಕ್ರಮಬದ್ಧವಾಗಿ, ನಿಯಮಬದ್ಧವಾಗಿ ಮಾಡಬೇಕು ಎಂದರು. ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಸಮಸ್ಯೆಗಳು ಬರಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಮುಂಗಾರು ಹಂಗಾಮು ಪೂರ್ವ ಸಿದ್ಧತೆ ಕುರಿತು ಸೂಕ್ತ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಸುಮಾರು 80 ಸಾವಿರ ರೈತರಿಗೆ ರೂ.284 ಕೋಟಿ ಬೆಳೆವಿಮೆ ಪಾವತಿಯಾಗಿದೆ. ಇದರ ಜೊತೆಗೆ ರೂ. 144 ಕೋಟಿ ಬೆಳೆಹಾನಿ ಪರಿಹಾರ ಸೇರಿದಂತೆ ಒಟ್ಟು ರೂ.400 ಕೋಟಿ ಪರಿಹಾರದ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದರು. ಕೃಷಿ ಪರಿಕರಗಳ ವ್ಯವಸ್ಥಿತ ವಿತರಣೆಗೆ ಜೊತೆಜೊತೆಗೆ ನವೀನ ತಾಂತ್ರಿಕತೆ ಅಳವಡಿಕೆ ಹಾಗೂ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕಾರ್ಯಕ್ರಮ, ರೂಪುರೇಷೆಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯ ಮುಂಗಾರು ಉತ್ತಮ ಆಶದಾಯಕವಾಗಿದ್ದು, ಕಳೆದ 10 ದಿನಗಳಿಂದ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಶೇ.9ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ 7 ಲಕ್ಷ 70 ಸಾವಿರ ಹೆಕ್ಟೇರ್ ಪ್ರದೇಶವಿದ್ದು, ಜಿಲ್ಲೆಯ ಆರು ತಾಲ್ಲೂಕುಗಳು ಸಹ ಭೌಗೋಳಿಕ ಭಿನ್ನತೆಯನ್ನು ಕಾಣಬಹುದಾಗಿದೆ. ಕೃಷಿ ಪ್ರಧಾನ ಜಿಲ್ಲೆಯಾಗಿರುವ ಚಿತ್ರದುರ್ಗದಲ್ಲಿ ಶೇ.75ರಷ್ಟು ಮುಂಗಾರು ಆಧಾರಿತ ಕೃಷಿ ಜಿಲ್ಲೆಯಲ್ಲಿದೆ. ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಾದ ಸುಮಾರು 3 ಲಕ್ಷ 4 ಸಾವಿರ ಹೆಕ್ಟೇರ್ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗುವ ಪ್ರದೇಶವಾಗಿದೆ. ಪ್ರಮುಖವಾಗಿ 1 ಲಕ್ಷ 14 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ, ಮುಸುಕಿನ ಜೋಳ ಸುಮಾರು 90 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಲಿದೆ. 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಲಿದೆ. 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳು ಬಿತ್ತನೆಯಾಗಲಿದೆ.
ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ವಿಶೇಷವಾಗಿ ಹೊಸದುರ್ಗ ತಾಲ್ಲೂಕಿನಲ್ಲಿ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಇದಕ್ಕೆ ಪೂರಕವಾಗಿ ಈ ಬಾರಿ 4 ಕೋಟಿ ವೆಚ್ಚದಲ್ಲಿ ಸಿರಿಧಾನ್ಯ ಮೌಲ್ಯವರ್ಧನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಮುಂಗಾರು ಹಂಗಾಮಿಗೆ ಸಂಬಂಧಪಟ್ಟಂತೆ ಜಿಲ್ಲೆಗೆ 64 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದೆ. 12 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರ ಬಿತ್ತನೆ ಸಂದರ್ಭದಲ್ಲಿ ಅವಶ್ಯಕತೆ ಇದ್ದು, ಪ್ರಸ್ತುತ 4 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಮಾತನಾಡಿ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೇಕ್ ಪಾಯಿಂಟ್ ಅವಶ್ಯಕತೆ ಇದೆ. ದಾವಣಗೆರೆ ರೇಕ್ ಪಾಯಿಂಟ್‍ನಿಂದ ಚಿತ್ರದುರ್ಗ ಜಿಲ್ಲೆಗೆ ರಸಗೊಬ್ಬರ ಸರಬರಾಜು ಮಾಡಲಾಗುತ್ತಿದೆ. ಹಾಗಾಗಿ ಜಿಲ್ಲೆಗೆ ರೇಕ್ ಪಾಯಿಂಟ್ ಅವಶ್ಯಕತೆ ಇದೆ. ಈ ಕುರಿತು ಜಿಲ್ಲಾಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಔಷಧಿ ಸಿಂಪರಣೆ ಮಾಡುವ ಡ್ರೋನ್‍ಗಳಿಗೆ ಚಾಲನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಓಂಕಾರಪ್ಪ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಉಪಕೃಷಿ ನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ್, ಪ್ರವೀಣ್ ಚೌಧರಿ, ತಹಶೀಲ್ದಾರ್ ಡಾ.ನಾಗವೇಣಿ, ಇಪ್ಕೊ ಸಂಸ್ಥೆಯ ಜಿಲ್ಲಾಮಟ್ಟದ ಅಧಿಕಾರಿ ಚಿದಂಬರಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ಪರಿಕರಗಳ ಮಾರಾಟಗಾರರು ಇದ್ದರು.

Related Post

Leave a Reply

Your email address will not be published. Required fields are marked *