ಚಿತ್ರದುರ್ಗ, ಜೂನ್ 04: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಕೋಟೆನಾಡು ಚಿತ್ರದುರ್ಗ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎನ್. ಚಂದ್ರಪ್ಪ ಹಾಗೂ ಎನ್.ಡಿ.ಎ ಮೈತ್ರಿ ಅಭ್ಯರ್ಥಿಯಾಗಿ ಗೋವಿಂದ ಕಾರಜೋಳ ಅವರು ಸ್ಪರ್ಧೆಯಲ್ಲಿದ್ದರು.
ಇವರಿಬ್ಬರ ನಡುವೆಯೂ ನೇರ ಹಣಾಹಣಿ ಸ್ಪರ್ಧೆ ಏರ್ಪಟ್ಟಿತ್ತು. ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಅನುಭವ ಹೊಂದಿರುವ ಗೋವಿಂದ ಕಾರಜೋಳ ಅವರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಬಿ. ಚಂದ್ರಪ್ಪ ಅವರ ಸ್ಪರ್ಧಿಸಿ ಮೊದಲ ಬಾರಿಗೆ ಗೆಲುವು ಸಾಧಿಸಿದ್ದರು. ತದನಂತರ 2018-19 ರಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಅವರ ವಿರುದ್ಧ ಸೋಲು ಕಂಡಿದ್ದರು. ಈ ಸೋಲಿಗೆ ಧೃತಿಗೆಡದೆ ಕ್ಷೇತ್ರದಲ್ಲಿ ಕಾರ್ಯಕರ್ತರನ್ನ ವಿಶ್ವಾಸಕ್ಕೆ ತೆಗೆದುಕೊಂಡು 2024ರಲ್ಲಿ ಮತ್ತೊಮ್ಮೆ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಸೋಲು ಕಂಡಿದ್ದಾರೆ. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧೀಕೃತ ಘೋಷಣೆಯೊಂದೇ ಬಾಕಿ ಇದೆ.