ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಕಾನೂನು ಸುವ್ಯವಸ್ಥೆಯಲ್ಲಿ ಅಪರಾಧಗಳು ಹೆಚ್ಚುತ್ತವೆ ಈ ಹಿನ್ನಲೆಯಲ್ಲಿ ಪ್ರತಿಪಕ್ಷಗಳು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪದೇ ಪದೇ ಆರೋಪ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯ ಮಹತ್ವದ ಸಭೆ ಕರೆದಿದ್ದಾರೆ.
ಜೂನ್ 25ರಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕೇಂದ್ರ ಕಛೇರಿಯಲ್ಲಿ ಪೊಲೀಸ್ ಇಲಾಖೆಯ ಮಹತ್ವದ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಡಿಜಿಪಿ, ಐಜಿಪಿ, ನಗರ ಪೊಲೀಸ್ ಆಯುಕ್ತರು, ಎಲ್ಲಾ ಜಿಲ್ಲೆಗಳ ಎಸ್ಪಿ, ರೈಲ್ವೆ ಮತ್ತು ನೇಮಕಾತಿ ವಿಭಾಗದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವರು. ಈ ಸಭೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ನಿರೀಕ್ಷೆ ಮಾಡಲಾಗಿದೆ.
ವಿವಿಧ ವಿಚಾರಗಳ ಕುರಿತು ಚರ್ಚೆ: ಹುಬ್ಬಳ್ಳಿಯಲ್ಲಿ ನಡೆದ ನೇಹಾ, ಅಂಜಲಿ ಕೊಲೆ ಪ್ರಕರಣ, ನಟ ದರ್ಶನ್ ಆರೋಪಿಯಾಗಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮುಖ್ಯಮಂತ್ರಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಿವರವಾಗಿ ಚರ್ಚೆ ನಡೆಸಲಿದ್ದಾರೆ.
ವಿರೋಧ ಪಕ್ಷವಾದ ಬಿಜೆಪಿ ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ಸೋತಿದೆ ಜೊತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಹದಗೆಟ್ಟಿದೆ ಎಂದು ಆರೋಪ ಮಾಡುತ್ತಿದೆ.
ಮಹಿಳೆಯರು, ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಸಮಾಜ ವಿರೋಧಿ ಶಕ್ತಿಗಳಿಗೆ ಧೈರ್ಯವನ್ನು ತುಂಬಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡುತ್ತಿದೆಯೆಂದು ರಾಜ್ಯದ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿವೆ.
ಕಾನೂನು ಸುವ್ಯವಸ್ಥೆ ಬಿಗಿಗೊಳಿಸಲು ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿಗಳು, ಗೃಹ ಸಚಿವರು ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುವ ನಿರೀಕ್ಷೆ ಇದೆ. ಅಲ್ಲದೇ ಸಭೆಯ ಬಳಿಕ ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳ ಬದಲಾವಣೆ ನಡೆಯಲಿದೆ ಎಂಬ ಸುದ್ದಿಗಳು ಹಬ್ಬಿವೆ.
ಇಲಾಖೆಯ ಉನ್ನತ ಅಧಿಕಾರಿಗಳು ಸೇರಿದಂತೆ ಹಲವು ಸ್ತರದ ಅಧಿಕಾರಿ/ ಸಿಬ್ಬಂದಿಗಳ ವರ್ಗಾವಣೆ ನಡೆಯುವ ನಿರೀಕ್ಷೆ ಇದೆ. ಅಲ್ಲದೇ ಇಲಾಖೆಗೆ ಸಂಬಂಧಿಸಿದ ನೇಮಕಾತಿಗಳಿಗೆ ಸಹ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿಗಳು ಹಸಿರು ನಿಶಾನೆ ತೋರಿಸುವ ನಿರೀಕ್ಷೆ ಇದೆ.
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು ಶಾಲಾ ಮತ್ತು ಕಾಲೇಜು ಹೆಣ್ಣುಮಕ್ಕಳ ಮೇಲೆ ನೆಡೆಯುತ್ತಿರುವ ಕೊಲೆ ಹಾಗೂ ದೌರ್ಜನ್ಯ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ಪಕ್ಷದ ನಿಯೋಗ ಕೆಲವು ದಿನಗಳ ಹಿಂದೆ ದೂರು ನೀಡಿತ್ತು.
ಇದಲ್ಲದೇ ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೊಳಿಸಲಾಗುವ 3 ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ. ಈ ಕುರಿತು ಸಹ ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆಯನ್ನು ನಡೆಸಲಿದ್ದಾರೆ.