ಬೆಂಗಳೂರು : ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆಗಳು ಮುಳುಗಡೆಯಾಗಿವೆ. ಜೊತೆಗೆ ತಂಪು ವಾತಾವರಣ ಹಾಗೂ ಶೀತಗಾಳಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ರಾಜ್ಯದ ವಿವಿಧೆಡೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾವೇರಿ : ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2 ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ತಂಪು ವಾತಾವರಣ ಹಾಗೂ ಶೀತಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಕ್ಕಳ ಆರೋಗ್ಯದ ಹಿತದೃಷ್ಠಿ ಮತ್ತು ರಕ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜು.26 ಮತ್ತು 27ರಂದು ಎರಡು ದಿನ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಚಿಕ್ಕಮಗಳೂರು : ಕಾಫಿನಾಡು ಭಾಗದಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದ್ದರೂ ಶೀತಗಾಳಿ ಹೆಚ್ಚಾಗಿರುವ ಕಾರಣ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಶುಕ್ರವಾರ (ಜು.26) ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್ ಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಗಾಳಿ-ಮಳೆಯ ಆರ್ಭಟ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನ ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶದಲ್ಲಿ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ರಸ್ತೆಗಳು ಮುಳುಗಡೆಯಾಗಿವೆ. ಈ ಹಿನ್ನೆಲೆಯಲ್ಲಿ ಜುಲೈ 26ರ ಶುಕ್ರವಾರದಂದು ಹಾಸನ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
6 ತಾಲ್ಲೂಕಿನ ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಕಾಲೇಜುಗಳು ಎಂದಿನಂತೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ ಪಾಂಡು ಸುತ್ತೋಲೆ ಹೊರಡಿಸಿದ್ದಾರೆ.