ಚಿತ್ರದುರ್ಗ.07: ಜಿಲ್ಲಾಡಳಿತದ ವತಿಯಿಂದ ಇದೇ ಆಗಸ್ಟ್ 26ರಂದು ಜಿಲ್ಲಾ ಕೇಂದ್ರದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಶ್ರೀಕೃಷ್ಣ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶ್ರೀ ಕೃಷ್ಣ ಜಯಂತಿಯನ್ನು ಆಗಸ್ಟ್ 26ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಶ್ರೀಕೃಷ್ಣ ವೃತ್ತದ ಸಮೀಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಸಮಾರಂಭದಲ್ಲಿ ಶ್ರೀಕೃಷ್ಣ ಅವರ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಯಾದವ ಸಂಘದ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಕಾರ್ಯದರ್ಶಿ ಆನಂದಪ್ಪ, ತಹಶೀಲ್ದಾರ್ ಡಾ.ನಾಗವೇಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಚಿದಾನಂದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.