ಚಿತ್ರದುರ್ಗ ಆಗಸ್ಟ್.14: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ತ್ರಿವರ್ಣ ಧ್ವಜ ಹಿಡಿದು ನಗರದಲ್ಲಿ ಬುಧವಾರ ತಿರಂಗಾ ಯಾತ್ರೆ ನಡೆಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದಡಿ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಗೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಭಾರತದಲ್ಲಿ ಯಾವುದಾದರೂ ಒಂದು ದಿನವನ್ನು ಸುವರ್ಣ ಅಕ್ಷರಗಳಿಂದ ದಾಖಲಿಸುವುದಾದರೆ ಅದು 1947 ಆಗಸ್ಟ್ 15. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಪ್ರತೀಕವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ತಿರಂಗಾ ಯಾತ್ರೆಯು ರಾಷ್ಟ್ರೀಯ ಐಕ್ಯತೆ ಮತ್ತು ಭಾವೈಕ್ಯತೆ ಸಾರುವ ಕೆಲಸ ಮಾಡುತ್ತಿದೆ. ದೇಶದ ತ್ರಿವರ್ಣ ಧ್ವಜವು ಕೇಸರಿ ಬಣ್ಣ ತ್ಯಾಗ ಶೌರ್ಯಗಳ ಸಂಕೇತವಾದರೆ, ಬಿಳಿ ಶಾಂತಿಯ ಸಂಕೇತ ಹಾಗೂ ಹಸಿರು ಸಮೃದ್ಧಿಯ ಸಂಕೇತ ಸೂಚಿಸುತ್ತದೆ ಎಂದು ತಿಳಿಸಿದ ಅವರು, ರಾಷ್ಟ್ರೀಯ ಹಬ್ಬಗಳನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.
ತಿರಂಗಾ ಯಾತ್ರೆ ಜಾಥಾವು ನಗರದ ಒನಕೆ ಓಬವ್ವ ವೃತ್ತದಿಂದ ಪ್ರಾರಂಭವಾಗಿ ಮದಕರಿ ವೃತ್ತ, ಅಂಬೇಡ್ಕರ್ ವೃತ್ತದ ಮಾರ್ಗವಾಗಿ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದವರೆಗೆ ಸಾಗಿ ತದನಂತರ ಪುನಃ ಒನಕೆ ಓಬವ್ವ ವೃತ್ತದಲ್ಲಿ ಅಂತ್ಯಗೊಂಡಿತು. ಜಾಥಾದಲ್ಲಿ ದೇಶ ಭಕ್ತಿಯ ಘೋಷಣೆಗಳು ಹಾಗೂ ಸ್ವಾತಂತ್ರ್ಯ ಸೇನಾನಿಗಳಿಗೆ ಜೈಕಾರ ಕೂಗಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಂ.ವಿ.ವೀಣಾ, ಸುಧಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.