ಚಿತ್ರದುರ್ಗ 16 : ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲತಾಯಂದಿರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಹಿಡಿಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಹೇಳಿದರು.
ಹೊಸದುರ್ಗದ ತೋಟದ ರಾಮಯ್ಯ ಗೌರಮ್ಮ ಬಾಲಿಕ ಪ್ರೌಢಶಾಲೆಯಲ್ಲಿ ಶುಕ್ರವಾರ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳ ಸುರಕ್ಷತೆಗಾಗಿ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ ಇವುಗಳ ವ್ಯತ್ಯಾಸ ತಿಳಿಸಿ ಹೇಳಿದರು.
ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಮಹಿಳೆಯರ ಮತ್ತು ಮಕ್ಕಳ ಮಾರಾಟ ನಿಷೇಧ ಕಾಯ್ದೆ ಬಗ್ಗೆ ಮಾಹಿತಿ ನೀಡಿದ ಅವರು, ಹೆಣ್ಣು ಮಕ್ಕಳ ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಹಾಗೂ ಸಹ ಶಿಕ್ಷಕರು ಮತ್ತು ಮಹಿಳಾ ಸಾಂತ್ವನ ಕೇಂದ್ರ ಸಿಬ್ಬಂದಿಗಳು ಹಾಜರಿದ್ದರು.