ಚಿತ್ರದುರ್ಗ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 21-45 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು ಹಾಗೂ 21-48 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯ ಪ್ರವಾಸಿ ಮಾರ್ಗದರ್ಶಿಯಾಗಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ನಗರದ ಕಾಮನಬಾವಿ ಬಡಾವಣೆ, ಕೋಟೆ ಸಮೀಪ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಡಿ.27ರ ಸಂಜೆ 5 ಗಂಟೆಯೊಳಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಮಾರ್ಗದರ್ಶಿ ಗೈಡ್ ಲೈಸನ್ಸ್ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕ ಬಿ.ಹೆಚ್.ಶಶಿಕುಮಾರ್ ತಿಳಿಸಿದ್ದಾರೆ.