ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪ್ರಚುರಪಡಿಸಿ
ಚಿತ್ರದುರ್ಗ
ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಚಿತ್ರದುರ್ಗ ತಾಲ್ಲೂಕಿನ ಪ್ರತಿ ಗ್ರಾಮದಲ್ಲಿಯೂ ಪ್ರಚುರಪಡಿಸಲು ತಕ್ಷಣವೇ ಅಗತ್ಯ ಕ್ರಮ ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಆರ್.ಪ್ರಕಾಶ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟಂತೆ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ತಾಲ್ಲೂಕಿನ ಎಲ್ಲ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ಗೃಹಲಕ್ಷ್ಮೀ ಯೋಜನೆಗಳ ಫಲಾನುಭವಿಗಳ ಪಟ್ಟಿ, ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆಗಳ ಫಲಾನುಭವಿಗಳ ಪಟ್ಟಿ ಹಾಗೂ ಬೆಸ್ಕಾಂ ಕಚೇರಿಯ ಸೂಚನಾ ಫಲಕಗಳಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಪ್ರಚುರ ಪಡಿಸಬೇಕು. ಶಕ್ತಿ ಯೋಜನೆ ಕುರಿತು ಬಸ್‍ಗಳಲ್ಲಿ ಹಾಗೂ ಬಸ್ ನಿಲ್ದಾಣಗಳಲ್ಲಿ ಆಡಿಯೋ ಮತ್ತು ವಿಡಿಯೋ ಜಿಂಗಲ್ಸ್ ಪ್ರದರ್ಶಿಸಬೇಕು. ಯುವ ನಿಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಗ್ಯಾರಂಟಿ ಯೋಜನೆಗಳ ಲಾಭ ತಲುಪಿಸಲು ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ತಿಳಿಸಿದ ಅವರು, ಯಾವುದೇ ಮಧ್ಯವರ್ತಿಗಳಿಲ್ಲದೆ ಗ್ಯಾರಂಟಿ ಯೋಜನೆಗಳ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಯಾಗುತ್ತಿದ್ದು, ಇದು ಪ್ರಸಕ್ತ ಸರ್ಕಾರದ ಮಹತ್ವದ ಸಾಧನೆಯಾಗಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಚಿತ್ರದುರ್ಗ ಮೊದಲ ಸ್ಥಾನ ಅಲಂಕರಿಸಲಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಬರಪೀಡಿತ ಚಿತ್ರದುರ್ಗ ಜಿಲ್ಲೆಯು ಮೊದಲ ಸ್ಥಾನ ಪಡೆಯಲು ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಳಿಸಲು ಅಧಿಕಾರಿಗಳು ಪ್ರಾಮಾಣಿಕ ಶ್ರಮ ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಚಿಕ್ಕಮಗಳೂರು ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.95 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಶೇ.100ರಷ್ಟು ಪ್ರಗತಿ ಸಾಧಿಸಲು ಕ್ರಮವಹಿಸುವ ಮೂಲಕ ಮೊದಲ ಸ್ಥಾನ ತಲುಪಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಸದಸ್ಯರಾದ ಸೈಯದ್ ಮುದಾಸಿರ್, ಅಬ್ಬುಲ್ ಸೇರಿದಂತೆ ತಾಲ್ಲೂಕು ಮಟ್ಟದ ಸಮಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.