ಚಿತ್ರದುರ್ಗ
ಇದೇ ಡಿ.07 ಮತ್ತು 8 ರಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಗಳಂತೆ ನಡೆಸುವ ಸಂಬಂಧ ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಡಿ.07ರಂದು ಕನ್ನಡ ಭಾಷಾ ಪರೀಕ್ಷೆ ಚಿತ್ರದುರ್ಗ ನಗರದಲ್ಲಿ 28 ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ನಗರದಲ್ಲಿ 01 ಪರೀಕ್ಷಾ ಕೇಂದ್ರದಲ್ಲಿ ಮತ್ತು ಡಿ.08ರಂದು ಸಾಮಾನ್ಯ ಜ್ಞಾನ ಪರೀಕ್ಷೆ ಚಿತ್ರದುರ್ಗ ನಗರದಲ್ಲಿ 30 ಪರೀಕ್ಷಾ ಕೇಂದ್ರಗಳು ಹಾಗೂ ಚಳ್ಳಕೆರೆ ನಗರದಲ್ಲಿ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಸಿ.ಆರ್.ಪಿ.ಸಿ ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಇಂಟರ್‍ನೆಟ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನದಂದು ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.