Breaking
Mon. Dec 23rd, 2024

ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ತನ್ನಿ….!

ಚಿತ್ರದುರ್ಗ : ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು. ಮಕ್ಕಳು ಶಾಲೆಗೆ ಗೈರು ಹಾಜರಾಗದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 4ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳು ಶಾಲೆಯಿಂದ ಹೊರಗುಳಿದರೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದ್ದು, ಫಲಿತಾಂಶ ಕಡಿಮೆಯಾಗಲಿದೆ. ಮಕ್ಕಳು ಶಾಲೆಯಿಂದ ಹೊರಗುಳಿಯಲು ನಿಖರವಾದ ಕಾರಣ ಪತ್ತೆ ಹಚ್ಚಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತರಲು ವಿಶೇಷ ಅಭಿಯಾನ ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಕಳೆದ ಸಾಲಿಗಿಂತ ಈ ಬಾರಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರಗಳನ್ನು ಆಯೋಜಿಸುವ ಮೂಲಕ ಫಲಿತಾಂಶದಲ್ಲಿ ಉತ್ತಮ ಸಾಧನೆಗೆ ಕ್ರಮವಹಿಸಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.50ರಷ್ಟು ಕಡಿಮೆ ಫಲಿತಾಂಶ ಇರುವ ಮುಖ್ಯ ಶಿಕ್ಷಕರ ಸಭೆ ಕರೆದು ಚರ್ಚಿಸಲಾಗಿದ್ದು, ಫಲಿತಾಂಶ ಹೆಚ್ಚಳಕ್ಕೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದದರು.

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಡಿ.ಓ.ಮುರಾರ್ಜಿ ಮಾತನಾಡಿ, ಪರಿಶಿಷ್ಟರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಸಂತ್ರಸ್ಥರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸವಾಗಬೇಕು. ದೌರ್ಜನ್ಯ ಪ್ರಕರಣಗಳು ದಾಖಲಾದ ಕೂಡಲೇ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಂತ್ರಸ್ಥರ ಮನೆ, ಕಾಲೋನಿಗಳಿಗೆ ಭೇಟಿ ನೀಡಿ, ಧೈರ್ಯ ನೀಡಬೇಕು. ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸಲಹೆ ನೀಡಿದರು.

 ದೌರ್ಜನ್ಯ ಪ್ರಕರಣಗಳಡಿ ಪರಿಹಾರ ಮಂಜೂರು ಮಾಡುವುದಕ್ಕಿಂತ ಮುಖ್ಯವಾಗಿ ಸಂತ್ರಸ್ಥರಿಗೆ ಮೊದಲು ಧೈರ್ಯ ತುಂಬುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನ ಒಳಗೊಂಡ ತಂಡವು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರೊಂದಿಗೆ ಭೇಟಿ ನೀಡಿ, ಜಾಗೃತಿ ಕಾರ್ಯಕ್ರಮ ಮೂಡಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ವಿಶೇಷ ಸರ್ಕಾರಿ ಅಭಿಯೋಜಕರು ದೌರ್ಜನ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ವಿಲೇವಾರಿಗೆ ಅಗತ್ಯ ಕ್ರಮವಹಿಸಬೇಕು ಜಿಲ್ಲಾಧಿಕಾರಿಗಳು ಸೂಚಿಸಿದರು.

ಇದೇ ಸಂದರ್ಭದಲ್ಲಿ ಎಸ್.ಸಿ.ಪಿ/ಟಿಎಸ್‍ಪಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಶೇ.100ರಷ್ಟು ಅನುದಾನ ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ದಿನಕರ್, ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಬಿ.ಆನಂದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಇದ್ದರು.

Related Post

Leave a Reply

Your email address will not be published. Required fields are marked *