ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಗೆ ಶನಿವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಹಾಗೂ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಜಿಲ್ಲಾಸ್ಪತ್ರೆಯ ಎಲ್ಲ ವಾರ್ಡ್‍ಗಳಿಗೂ ಖುದ್ದಾಗಿ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದರು. ಜಿಲ್ಲಾಸ್ಪತ್ರೆಯ ಕಾರ್ಯವೈಖರಿ, ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ, ವೈದ್ಯರು ಹಾಗೂ ರೋಗಿಗಳಿಂದ ಆಸ್ಪತ್ರೆಯ ಕುರಿತು ಮಾಹಿತಿ ಪಡೆದರು.
ಜಿಲ್ಲಾಸ್ಪತ್ರೆಯ ಹೊರರೋಗಿಗಳ ವಿಭಾಗದ ಅರ್ಥೋಪೆಡಿಕ್ ಒಪಿಡಿ, ಸರ್ಜಿಕಲ್ ಒಪಿಡಿ, ಫಿಜಿಯೋಥೆರಪಿ, ಮಹಿಳೆಯರು ಹಾಗೂ ಪುರಷರ ತುರ್ತು ಚಿಕಿತ್ಸಾ ವಾರ್ಡ್, ಶಸ್ತ್ರಚಿಕಿತ್ಸಾ ವಿಭಾಗ, ಕಣ್ಣಿನ ಶಸ್ತ್ರಚಿಕಿತ್ಸಾ ವಿಭಾಗ, ಹೈಟೆಕ್ ಲ್ಯಾಬ್, ಯುರಾಲಜಿ ಹೊರರೋಗಿಗಳ ವಿಭಾಗ, ಕ್ಷ-ಕಿರಣ ವಿಭಾಗ, ರಕ್ತನಿಧಿ ಕೇಂದ್ರ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಎಲ್ಲ ವಿಭಾಗ ಹಾಗೂ ವಾರ್ಡ್‍ಗಳಿಗೂ ಹಾಗೂ ಅಡುಗೆ ಮನೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಕುರಿತು ವೀಕ್ಷಣೆ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್, ಜಿಲ್ಲಾಸ್ಪತ್ರೆಯ ಎಲ್ಲ ವಿಭಾಗಗಳಿಗೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯ ಕೆಲವು ವಿಭಾಗಗಳಲ್ಲಿ ಸುಧಾರಣೆ ಆಗಬೇಕಿದೆ. ಇನ್ನೂ ಕೆಲವು ವಿಭಾಗಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದಾಗ್ಯೂ ವಿವಿಧ ವಿಭಾಗಗಳಲ್ಲಿ ಇನ್ನಷ್ಟು ಸುಧಾರಣೆ ಕೈಗೊಳ್ಳಬೇಕಾದ ಅಗತ್ಯವಿದೆ. ಈ ಕುರಿತಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸಲಹೆ, ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.
ಆಸ್ಪತ್ರೆಗೆ ಆಗಿಂದಾಗೆ ಭೇಟಿ ನೀಡಿ, ಜಿಲ್ಲಾಸ್ಪತ್ರೆಯ ಕಾರ್ಯವೈಖರಿ ಕುರಿತು ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿ, ಸಾರ್ವಜನಿಕರಿಗೆ ಸರಿಯಾಗಿ ಚಿಕಿತ್ಸಾ ಸೌಲಭ್ಯಗಳು ಉಚಿತವಾಗಿ ದೊರೆಯುತ್ತಿವೆಯೋ, ಇಲ್ಲವೋ ಎಂಬುದನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ನಿವಾಸಿ ವೈದ್ಯಾಧಿಕಾರಿ ಡಾ.ಆನಂದ ಪ್ರಕಾಶ್ ಸೇರಿದಂತೆ ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಇದ್ದರು.