ಚಿತ್ರದುರ್ಗ : ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮ ಪರಿಣಾಮಕಾರಿಯನ್ನಾಗಿಸಲು ಹೆಚ್ಚು ಹೆಚ್ಚು ದಾಳಿ ಮಾಡಬೇಕು. ತಂಬಾಕು ನಿಯಂತ್ರಣ ಕಾರ್ಯಾಚರಣೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ನಿಯಂತ್ರಣ (ಕೋಟ್ಪಾ-2003) ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಹಕಾರ ಪಡೆದು ತಂಬಾಕು ಮುಕ್ತ ಶಾಲೆ, ತಂಬಾಕು ಮುಕ್ತ ಗ್ರಾಮಗಳನ್ನು ಗುರುತಿಸಬೇಕು. ಇದರಿಂದ ಬೇರೆ ಬೇರೆ ಹಳ್ಳಿಗಳಿಗೂ ಸ್ಪೂರ್ತಿ ಹಾಗೂ ಪ್ರೇರಣೆಯಾಗಲಿದ್ದು, ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಸಾರ್ಧಯವಾಗಲಿದೆ ಎಂದು ಹೇಳಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್ ಮಾತನಾಡಿ, ಜಿಲ್ಲೆಯ ತಂಬಾಕು ಮುಕ್ತ ಶಾಲೆ-ಕಾಲೇಜುಗಳ ದೃಢೀಕರಣ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಬೇಕು ಎಂದು ಹೇಳಿದರು.
ತಾಲ್ಲೂಕು ಮಟ್ಟದ ತಹಶೀಲ್ದಾರ್‍ಗಳ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿಯ ತನಿಖಾ ದಳದ ಸದಸ್ಯರೊಂದಿಗೆ ತ್ರೈಮಾಸಿಕ ಸಭೆ ಮತ್ತು ತಂಬಾಕು ಕಾರ್ಯಾಚರಣೆ ನಡೆಸಿ ಗುರಿ ಸಾಧಿಸಬೇಕು. ತಂಬಾಕು ವ್ಯಸನಮುಕ್ತ ಕೇಂದ್ರಕ್ಕೆ ಮನೋಶಾಸ್ತ್ರಜ್ಞರನ್ನು ನಿಯೋಜಿಸಲು ಕೋರಿದರು.
ಸಭೆಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.