ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ಜನವರಿ 26 ರಂದು ನಡೆಯುವ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ಅನಂತಪುರ ರಸ್ತೆಯ ನೂತನ ಆಧುನಿಕ ಭವನದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಿಗ್ಗೆ 9ಕ್ಕೆ ನಗರದ ವಿಮ್ಸ್ ಮೈದಾನದಲ್ಲಿ ಆಚರಿಸಲಾಯಿತು. ಶಿಷ್ಠಾಚಾರದ ನಿಯಮಗಳಂತೆ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಪ್ರತಿನಿಧಿಗಳು, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ವಿವಿಧ ಇಲಾಖೆ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಗಣರಾಜ್ಯೋತ್ಸವ ಆಚರಣೆಗೆ ಸ್ವಾಗತ, ಶಿಷ್ಠಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಆಯಾ ಸಮಿತಿಯ ಅಧಿಕಾರಿಗಳು ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವಿಮ್ಸ್ ಮೈದಾನ ಆವರಣವನ್ನು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಗಣ್ಯರು ಕುಳಿತುಕೊಳ್ಳಲು ಆಸನ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ.
ಪೆರೆಡ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಇದಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿ ಮಾಡಿಕೊಳ್ಳಬೇಕು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜನಾಕರ್ಷಣೀಯವಾಗಿ ದೇಶಭಕ್ತಿ ಬಿಂಬಿಸುವ ಕನ್ನಡ ಹಾಡುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಅವರು ಸೂಚಿಸಿದರು.
ಅಂದು ಸಂಜೆ ನಗರದ ಡಾ.ಜೋಳದರಾಶಿನಗೌಡ ರಂಗಮ.ಆದಿರದಲ್ಲಿ ಪ್ರೇಮ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿ ಬಿ.ನಾಗರಾಜ ಅವರಿಗೆ ನಿರ್ದೇಶನ ನೀಡಲಾಗಿದೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.