ರಾಯ್‌ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಪಡೆಗಳ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸಿತು. ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ತಿಳಿಸಿದ್ದಾರೆ.
ಗುಂಡಿನ ಚಕಮಕಿ ಬಳಿಕ ಮೂವರು ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ. ಸ್ಥಳದಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳು ಸಹ ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಈ ವರ್ಷ ನಡೆದ ಪ್ರತ್ಯೇಕ ಘರ್ಷಣೆಯಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ. ಪೊಲೀಸರ ಪ್ರಕಾರ, ಕಳೆದ ವರ್ಷ ರಾಜ್ಯದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ 219 ಮಾವೋವಾದಿಗಳು ಹತರಾಗಿದ್ದರು.
ಈ ವರ್ಷದ ಜನವರಿ 6 ರಂದು ಬಿಜಾಪುರ ಪ್ರದೇಶದಲ್ಲಿ ಮಾವೋವಾದಿಗಳು ಐಇಡಿ ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಎಂಟು ಪೊಲೀಸ್ ಅಧಿಕಾರಿಗಳು ಮತ್ತು ಚಾಲಕ ಸಾವನ್ನಪ್ಪಿದ್ದಾರೆ.