Breaking
Sat. Jan 18th, 2025

ಸಾರ್ವಜನಿಕ ಅಹವಾಲು, ಕುಂದುಕೊರತೆ ಸ್ವೀಕಾರ ಸಭೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸೂಚನೆ

ಸಾರ್ವಜನಿಕ ಅಹವಾಲು, ಕುಂದುಕೊರತೆ ಸ್ವೀಕಾರ ಸಭೆಯಲ್ಲಿ ಕರ್ನಾಟಕ ಉಪಲೋಕಾಯುಕ್ತ ನ್ಯಾ.ಬಿ.ವೀರಪ್ಪ ಸೂಚನ

ಅಧಿಕಾರಿಗಳು ಭ್ರಷ್ಟಾಚಾರ ಮುಕ್ತ ಆಡಳಿತ ಸೇವೆ ನೀಡಬೇಕು

ಬಳ್ಳಾರಿ  :  ಸರ್ಕಾರಿ ನೌಕರರು ಭ್ರಷ್ಟಾಚಾರ ಮುಕ್ತವಾಗಿ ಸಾರ್ವಜನಿಕರಿಗೆ ಆಡಳಿತ ಸೇವೆ ನೀಡಬೇಕು ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಹೇಳಿದರು.

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾರ್ವಜನಿಕ ಅಹವಾಲು/ಕುಂದುಕೊರತೆ ದೂರುಗಳ ಸ್ವೀಕಾರ, ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ಯಾನ್ಸರ್ ಗಿಂತಲೂ ಭಯಂಕರ ಭ್ರಷ್ಟಾಚಾರ ಎನ್ನುವ ಖಾಯಿಲೆ. ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಹಾಗಾಗಿ ಸರ್ಕಾರಿ ನೌಕರರು ಭ್ರಷ್ಟಾಚಾರ ತೊರೆದು ಪ್ರಾಮಾಣಿಕ ಹಾದಿಯಲ್ಲಿ ನಡೆದು, ತಮ್ಮ ಕರ್ತವ್ಯದಲ್ಲಿ ಸತ್ಯ, ನಿಷ್ಠೆ ಹಾಗೂ ಮಾನವೀಯತೆ ಪ್ರದರ್ಶಿಸಿ ಅಭಿವೃದ್ಧಿಗೆ ಪೂರಕವಾಗಬೇಕು ಎಂದು ತಿಳಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡುವ ಸವಲತ್ತುಗಳನ್ನು ಪಡೆಯುವ ಹಕ್ಕು ಎಲ್ಲ ನಾಗರಿಕರಿಗೆ ಇದೆ. ಎಲ್ಲರಿಗೂ ಸಮಪಾಲು, ಸಮಬಾಳು ಎಂಬ ಸಂವಿಧಾನದ ಆಶೋತ್ತರದ ಅಡಿಯಲ್ಲಿ ಲೋಕಾಯುಕ್ತ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಜನರಿಗೆ ಸರ್ಕಾರದ ಸೌಕರ್ಯಗಳು ಸಿಗದೇ ಇದ್ದಲ್ಲಿ, ಆ ಸೌಲಭ್ಯಗಳನ್ನು ಕೊಡಿಸುವ ಕೆಲಸವನ್ನು ಸಂಸ್ಥೆ ಮಾಡುತ್ತದೆ ಎಂದು ಅವರು ಹೇಳಿದರು.

ಸ್ವಾತಂತ್ರö್ಯ ಲಭಿಸಿ 75 ವರ್ಷ ಕಳೆದರೂ, ಭ್ರಷ್ಟಾಚಾರದಿಂದ ಸಂವಿಧಾನದ ಹಕ್ಕುಗಳನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ನಾಲ್ಕು ಅಂಗಗಳು ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತಿವೆ. ನಾಲ್ಕನೇ ಸ್ತಂಭವಾಗಿರುವ ಮಾಧ್ಯಮಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಲ್ಲಿ ಸಮಾಜದ ತಪ್ಪುಗಳನ್ನು ತಿದ್ದಲು ಸಾಧ್ಯ. ತನ್ಮೂಲಕ ಪ್ರಾಮಾಣಿಕ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ದೇಶದ ಸೈನಿಕರು ನಿಸ್ವಾರ್ಥದ ಸೇವೆ ನೀಡುತ್ತಿದ್ದಾರೆ. ಆದರೆ ಮಾನವನು ಸ್ವಾರ್ಥದಿಂದ ಪ್ರಕೃತಿ, ಪ್ರಾಣಿ-ಪಕ್ಷಿ ಸಂಕುಲ ನಾಶ ಪಡಿಸುತ್ತಿದ್ದಾನೆ. ನಿಸರ್ಗದಲ್ಲಿ ಪಂಚಭೂತಗಳಿಲ್ಲದಿದ್ದರೆ ನಾವಿಲ್ಲ; ಅವುಗಳೇ ತಮ್ಮ-ತಮ್ಮ ಕೆಲಸ ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವಾಗ ಅಧಿಕಾರಿಗಳು ಪ್ರಾಮಾಣಿಕ ಸೇವೆ ನೀಡಲು ಏನು ಸಮಸ್ಯೆ ಎಂದು ವಿಷಾದ ವ್ಯಕ್ತಪಡಿಸಿದರು.

ಜನರ ಕುಂದುಕೊರತೆಗಳನ್ನು ಬಗೆಹರಿಸುವುದು, ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ಲೋಕಾಯುಕ್ತ ಸಂಸ್ಥೆಯ ಕಾರ್ಯೋದ್ದೇಶ. ಸರ್ಕಾರದ ಸೌಲಭ್ಯಗಳನ್ನು ನೀಡುವ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಕರ್ತವ್ಯಲೋಪ ಎಸಗಿದರೆ, ದುರ್ನಡತೆ ಪ್ರದರ್ಶಿಸಿದರೆ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ. ದೂರುದಾರರು ಸುಳ್ಳು ಆರೋಪ ನೀಡಿದಲ್ಲಿ ಅಂತಹ ಪ್ರಕರಣಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನೂ ಸಹ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಸಾರ್ವಜನಿಕರು ಕಾನೂನು ವಿಷಯಗಳ ಕುರಿತು ತಿಳುವಳಿಕೆ ಹೊಂದಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದ ಬದುಕು ಬದುಕಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸಿದ್ದರು.

ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಗಣ್ಯರನ್ನು ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ವಂದಿಸಿದರು.

ಈ ವೇಳೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭರಾಣಿ ವಿ.ಜೆ., ಬಳ್ಳಾರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯೂ ಆದ ರಾಜೇಶ್ ಎನ್.ಹೊಸಮನೆ, ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು, ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಸಾರ್ವಜನಿಕರಿಂದ ಅಹವಾಲು/ಕುಂದುಕೊರತೆ ದೂರುಗಳ ಸ್ವೀಕಾರ, ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ನಡೆಯಿತು.

Related Post

Leave a Reply

Your email address will not be published. Required fields are marked *